ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ.
ಈತ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಸಲ್ಪಟ್ಟು ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಲು ತೆರಳಿದ ವೇಳೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ದ ಮಂಗಳೂರು ನಗರದ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ 15 ಹೆಚ್ಚು ದನಕಳ್ಳತನ ಪ್ರಕರಣಗಳು ದಾಖಲಾಗಿತ್ತು. ಹೀಗೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳಿನಿಂದ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ ತಲೆಮರೆಸಿಕೊಂಡಿದ್ದ. ಸದ್ಯ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.