ಮಂಗಳೂರು: ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಒಟ್ಟು 6.41 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಮಂಗಳೂರು ಹೊರ ವಲಯದ ಉಳ್ಳಾಲ ತಾಲೂಕಿನ ನರಿಂಗಾನದ ತೌಡುಗೋಳಿ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್ (42)ಬಂಧಿತ ಆರೋಪಿ.
ಈ ಹಿಂದೆ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಅಬ್ಬುಲ್ ಅಝೀಝ್ ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಆತನಿಂದ ಒಟ್ಟು 26 ಗ್ರಾಂ ತೂಕದ 1,30,000 ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಅದನ್ನು ಸಾಗಿಸಲು ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 6,41,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ವೇಳೆ ಕಾರಾಗೃಹ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ಕೂಡಾ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.