ಮಂಗಳೂರು: ಪ್ಯಾನ್ ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿಗೊಳಿಸುವ ನಿಟ್ಟಿನಲ್ಲಿ ನವೆಂಬರ್ 20ರಿಂದ ಡಿಸೆಂಬರ್ 10ರವರೆಗೆ ಹೊಟೇಲ್, ಗ್ಯಾರೇಜ್, ಅಪಾರ್ಟ್‍ಮೆಂಟ್ಸ್, ಧಕ್ಕೆ ಪ್ರದೇಶಗಳು, ಕಟ್ಟಡ ನಿರ್ಮಾಣ ಸ್ಥಳಗಳು ಹಾಗೂ ಇನ್ನಿತರ ಸಂಸ್ಥೆಗಳಿಗೆ ಅನೀರಿಕ್ಷಿತ ದಾಳಿಯನ್ನು ಹಮ್ಮಿಕೊಳ್ಳಲಾಗಿದೆ.
ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ) ಕಾಯ್ದೆ-1986ರನ್ವಯ 14ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ 15 ವರ್ಷದಿಂದ 18ವರ್ಷದೊಳಗಿನ ಮಕ್ಕಳು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುತ್ತಿರುವುದನ್ನು ನಿಯಂತ್ರಿಸಲಾಗಿರುತ್ತದೆ.ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000 ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್ ದಾಖಲಿಸಲಾಗುವುದು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್‍ಲೈನ್:1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆಗಳಾದ 0824-2435343, 2433132, 2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ: 2433131ಗೆ ಸಾರ್ವಜನಿಕರು ಕರೆ ಮಾಡಿ ತಿಳಿಸಲು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.