ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್‌ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆರೆ ಜಿಲ್ಲೆಯಾದ ಶಿವಮೊಗ್ಗದಲ್ಲಿ 47, ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಮಂಗನ ಕಾಯಿಲೆ ವರದಿಯಾಗಿಲ್ಲ. ಈ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಕಾಡಂಚಿನ ಗ್ರಾಮದಲ್ಲಿ ಮಂಗಗಳು ಸತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದು ಡಿಸಿ ಸೂಚಿಸಿದರು.