ಉಡುಪಿ: ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ನಮ್ಮ ದೇಶದಲ್ಲಿ ಪಲ್ಸ್ ಪೊಲಿಯೋ ಪ್ರಕರಣಗಳು ಶೂನ್ಯವಿದ್ದರೂ ಸಹ, ಯಾವುದೇ ಮಕ್ಕಳಿಗೆ ಬರಬಾರದು ಎಂಬ ಉದ್ದೇಶದಿಂದ ಪೊಲಿಯೋ ಲಸಿಕೆಯನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಮಕ್ಕಳಿಗೂ ಪೊಲೀಯೋ ಲಸಿಕೆ ಹನಿಯನ್ನು ಹಾಕಿಸಿ, ಪ್ರತಿಶತಃ ನೂರರಷ್ಟು ಸಾಧಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಲಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.