ಮಂಗಳೂರು : ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೈ ಚರ್ಚ್ ಬಳಿಯ ಬಿಜೈ ನ್ಯೂರೋಡ್ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು, ಬಂಡ್ಸಾಲೆ ಹೌಸ್ ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು, ಜೆ.ಎಂ.ಕ್ರಾಸ್ ರಸ್ತೆಯ ನಿವಾಸಿಮೊಹಮ್ಮದ್ ನೌಮಾನ್(22), ಉಳ್ಳಾಲದ ಬೋಳಿಯಾರ್ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತ ಆರೋಪಿಗಳು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಎಂಡಿಎಂಎ ಮಾದಕದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ 270 ಗ್ರಾಂ ತೂಕದ 6,50,000 ರೂ ಮೌಲ್ಯದ ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಈ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.