ವಿಟ್ಲ: ಉಡುಪಿ-ಕಾಸರಗೊಡು ವಿದ್ಯುತ್ ಮಾರ್ಗ ಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಕೃಷಿ ಜಮೀನುಗಳನ್ನು ಉಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರಿಗೆ, ಸಂಸದರಿಗೆ ಹಲವು ಬಾರಿ ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ ಅವರು ಅದನ್ನು ಕಸದ ಬುಟ್ಟಿಗೆ ಎಸೆದು ಕಂಪನಿಯ ಏಜೆಂಟರಂತೆ ವರ್ತಿಸುತ್ತಿರುವುದು ಖಂಡನಾರ್ಹ. ಕೃಷಿ ಜಮೀನುಗಳನ್ನು ಹಾಳು ಮಾಡುವ ಈ ಯೋಜನೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಇದರ ವಿರುದ್ಧ ಹೋರಾಟಕ್ಕಿಳಿದಿರುವ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಹುನ್ನಾರ ನಡೆಯುತ್ತಿದೆ. ಇದು ಮುಂದುವರಿದರೆ ಮುಂದಿನ ದಿನ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಎಚ್ಚರಿಸಿದ್ದಾರೆ. ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು. ಯೋಜನೆಗಾಗಿ ಪಡುಬಿದ್ರೆಯ ಇನ್ನಾದಲ್ಲಿ ಭತ್ತದ ಗದ್ದೆಯನ್ನು ಹಾಳುಗೆಡುವುದನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಯೋಜನೆಯ ಕಾಮಗಾರಿ ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಿದ್ದು, ಇದು ಉಭಯ ಜಿಲ್ಲೆಗಳಿಗೆ ಅನ್ವಯವಾಗಿದೆ. ಆದರೆ ಕಂಪೆನಿಯು ಕೆಲವು ಅಧಿಕಾರಿಗಳ ಸಹಕಾರವನ್ನು ಪಡೆದು ರಾತ್ರಿ ಹೊತ್ತು ಕಳ್ಳರಂತೆ ಜಮೀನುಗಳಿಗೆ ನುಗ್ಗುತ್ತಿದೆ. ಇದು ಮುಂದುವರಿದರೆ ರಾಜ್ಯದ ಹಸಿರು ಸೇನೆಯನ್ನು ಒಗ್ಗೂಡಿಸಿ ಅಹಿಂಸಾತ್ಮಕವಾಗಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ರೈತ ಸಂಘ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮಾತನಾಡಿ, ಶೇ.80ರಷ್ಟು ರೈತರ ಒಪ್ಪಿಗೆ ಇದ್ದರೆ ಮಾತ್ರ ಉಡುಪಿ-ಕಾಸರಗೊಡು ವಿದ್ಯುತ್ ಮಾರ್ಗ ಯೋಜನೆ ಮಾಡಬೇಕೆಂಬ ನಿಯಮವನ್ನು ಗಾಳಿಗೆ ತೂರಿ ಕೆಲಸ ನಿರ್ವಹಿಸಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ, ಕೋಶಾಧಿಕಾರಿ ಚಿತ್ತರಂಜನ್ ಎನ್.ಎಸ್.ಡಿ., ಕಾರ್ಯದರ್ಶಿ ಕೃಷ್ಣ ಪ್ರಸಾದ್, ಲಕ್ಷ್ಮೀನಾರಾಯಣ ಮತ್ತಿತರರು ಉಪಸ್ಥಿತರಿದ್ದರು.