ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಮತ್ತೆ ಮರುಜೀವ ಬಂದಿದೆ. ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದ ಮುಂದೆ ವಕೀಲ ಪ್ರಶಾಂತ್ ಭೂಷಣ್ ಈ ವಿಚಾರವನ್ನು ಪ್ರಸ್ತಾಪಿಸಿದ್ರು. ಮುಂದಿನ ವಾರ ಸೂಕ್ತ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆ ನಡೆಸಲು ಸಮ್ಮತಿಸಲಾಯ್ತು.
ಏನಿದು ಹಿಜಾಬ್ ವಿವಾದ ?
2022 ರ ಜನವರಿಯಲ್ಲಿ ಉಡುಪಿಯ ಶಾಲೆಯೊಂದು ತರಗತಿಯೊಳಗೆ ಹಿಜಾಬ್ ಧರಿಸದಂತೆ ನಿಷೇಧಿಸಿತ್ತು. ಈ ವಿಚಾರ ಕರ್ನಾಟಕದಲ್ಲಿ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. ಹಿಜಾಬ್ ನಿಷೇಧ ವಿಚಾರವನ್ನು ಮುಸ್ಲಿಂ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಫೆಬ್ರವರಿ 25 ರಂದು ಪ್ರಕರಣದ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿತ್ತು. ನಂತರ ಹಿಜಾಬ್ ನಿಷೇಧಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆಗಳು, ಆರೋಪ ಪ್ರತ್ಯಾರೋಪಗಳು ಭುಗಿಲೆದ್ದಿದ್ದವು.
ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದದ ತೀರ್ಪು ಹೊರಬಿದ್ದಿತ್ತು. ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಕರ್ನಾಟಕ ಶಾಲೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್, ಸಮವಸ್ತ್ರ ಧರಿಸುವುದರ ಮೇಲಿನ ನಿರ್ಬಂಧಗಳು ಸಮಂಜಸವಾಗಿದೆ ಮತ್ತು ವಿದ್ಯಾರ್ಥಿಗಳು ಅದನ್ನು ವಿರೋಧಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಇದಾದ ಬಳಿಕ ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಉಡುಪಿಯ ಆರು ಮುಸ್ಲಿಂ ವಿದ್ಯಾರ್ಥಿಗಳು ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಮುಸ್ಲಿಂ ವಿದ್ಯಾರ್ಥಿನಿ ನಿಬಾ ನಾಜ್ ಪರವಾಗಿ ವಿಶೇಷ ರಜೆ ಅರ್ಜಿ ಸಲ್ಲಿಸಲಾಗಿತ್ತು. ಕರ್ನಾಟಕ ಶಿಕ್ಷಣ ಕಾಯಿದೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಲು ಅವಕಾಶವಿಲ್ಲ ಮತ್ತು ಹಿಜಾಬ್ ಧರಿಸುವ ಹಕ್ಕು ಖಾಸಗಿತನದ ಹಕ್ಕಿನ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಗಮನಿಸಲು ಹೈಕೋರ್ಟ್ ವಿಫಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.