ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸುಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ.
ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರವಿವಾರದಿಂದ ಕರಾವಳಿಯಲ್ಲಿ ವಿವಿಧಡೆ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಉಡುಪಿ,ಕಾರ್ಕಳ, ಕುಂದಾಪುರ, ಹೆಬ್ರಿ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ
ಈ ವೇಳೆ ರಭಸವಾಗಿ ಗಾಳಿ ಮಳೆ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.