ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ತಲಯಾಡ್ ಪೋಸ್ಟ್‌ನ ಕಂದಲಾಡ್ ಗ್ರಾಮದ ನಿವಾಸಿ ಶಮೀರ್ ಪಿ.ಕೆ.(42) ಬಂಧಿತ ಆರೋಪಿ. ಈತ ನಿಷೇಧಿತ ಮಾದಕದ್ರವ್ಯ ಹೈಡ್ರೋವಿಡ್ ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಬಪ್ಪನಾಡು ರಾಷ್ಟ್ರೀಯ ಹೆದ್ದಾರಿ ಬಳಿ ಕಾರನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 73 ಲಕ್ಷ ರೂ. ಮೌಲ್ಯದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 80,10,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹೈಡ್ರೋವಿಡ್ ಗಾಂಜಾವನ್ನು ವಿದೇಶದಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ.