ಕಾರವಾರ : ಹಾಲಕ್ಕಿ ಬುಡಕಟ್ಟು ಸಮುದಾಯದ ಹೋರಾಟಗಾರ್ತಿ, ಹಿರಿಯ ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.
ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.