ಮಂಗಳೂರು: ಆಟೊರಿಕ್ಷಾವೊಂದರಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೊರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32) ಎಂಬಾತನನ್ನು ಬಂಧಿಸಿ 3,75,000 ರೂ. ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಆಟೊ ರಿಕ್ಷಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇವುಗಳ ಸೊತ್ತಿನ ಒಟ್ಟು ಮೌಲ್ಯ 5 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್‌ರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ.ನೇತೃತ್ವದಲ್ಲಿ ಎಸ್ಸೈ ಸುದೀಪ್ ಎಂವಿ, ಎಎಸ್ಸೈ ರಾಮ ಪೂಜಾರಿ ಹಾಗೂ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.