ಬೆಂಗಳೂರು: ನೀಟ್ (NEET) ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಕಾದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರಿ ಹೈಡ್ರಾಮಾವೇ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೇ, ಬಿಜೆಪಿ ನಾಯಕರು ಕಂಟೋನ್ಮೆಂಟ್ ಬಳಿ ಇರುವ ಕೆಪಿಸಿಸಿ (KPCC) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಈ ಪ್ರತಿಭಟನೆಯ ನಡುವೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರು ಕೆಪಿಸಿಸಿ ಕಚೇರಿ ಮುಂಭಾಗಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವರ ಮೇಲೆ ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ವಿರುದ್ಧ ತೀವ್ರವಾಗಿ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿ.ಪಿ. ಹರೀಶ್ ಅವರನ್ನು ಅಲ್ಲಿಂದ ಕಾಲ್ತೆಗೆಯುವಂತೆ ಮಾಡಿ ವಾಪಸ್ ಕಳುಹಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ತಮ್ಮ ಶಾಸಕರ ಮೇಲಿನ ಮೊಟ್ಟೆ ಎಸೆತ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡವಳಿಕೆಯನ್ನು ಖಂಡಿಸಿದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಗ his ಜನಾರ್ದನ ರೆಡ್ಡಿ ಹಾಗೂ ಎನ್. ರವಿಕುಮಾರ್ ಸೇರಿದಂತೆ ಪ್ರಮುಖ ನಾಯಕರು ಸ್ಥಳದಲ್ಲೇ ಧಿಕ್ಕಾರ ಕೂಗಿ ಪ್ರತಿಭಟಿಸಿದರು. ಬಳಿಕ ನಿಯೋಗವಾಗಿ ನಗರ ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ.




