ಉಡುಪಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ಧ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದರು.
ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ನಗರದ ಜೋಡುಕಟ್ಟೆಯಿಂದ ಶಾಸಕರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜಿಸಲಾಗಿತ್ತು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೋಡುಕಟ್ಟೆ ಹಾಗೂ ಶಾಸಕರ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರತಿಭಟನಾಕಾರರು ಜೋಡುಕಟ್ಟೆಯಲ್ಲಿ ಸೇರಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಾಸಕರ ಕಚೇರಿಯತ್ತ ಸಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.
ಇದೇ ವೇಳೆ ಶಾಸಕರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಎರಡೂ ಪಕ್ಷಗಳ ಕಾರ್ಯಕರ್ತರ ಉಪಸ್ಥಿತಿಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.




