ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಸುದ್ದಿಯಲ್ಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
ಇತ್ತೀಚೆಗೆ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಹಾಗೂ ಪೆನ್‌ಡ್ರೈವ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅದೇ ದಿನ ಜೈಲು ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಮತ್ತೊಂದು ಮೊಬೈಲ್ ಪತ್ತೆಯಾಗಿದೆ.ದೇವರ ಫೋಟೊದ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಅಧಿಕಾರಿಗಳ ಕೈಗೆ ಸಿಕ್ಕಿದೆ. ಸಿಮ್ ಕಾರ್ಡ್ ಇಲ್ಲದೆ, ಸ್ವಿಚ್‌ಆಫ್ ಸ್ಥಿತಿಯಲ್ಲಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮೊಬೈಲ್‌ನ್ನು ಯಾರು ಬಳಸುತ್ತಿದ್ದರು? ಜೈಲಿನೊಳಗೆ ಮೊಬೈಲ್ ಹೇಗೆ ಪ್ರವೇಶಿಸಿತು? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




