ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆಗೆ ಸೂಕ್ತ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ (Controller of Examinations) ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ.
ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ನಿನ್ನೆ ಸತತ 11 ಗಂಟೆಗಳ ಕಾಲ ಗ್ಯಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಇಂದು ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ ತನಿಖಾಧಿಕಾರಿಗಳು, ಅವರು ನೀಡಿದ ಹೇಳಿಕೆಗಳಲ್ಲಿನ ಅಸಮಂಜಸತೆ ಹಾಗೂ ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮವಾಗಿ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಅಧಿಕಾರಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಪ್ರಕರಣದ ಮತ್ತಷ್ಟು ಆಳವಾದ ಮಾಹಿತಿ ಹಾಗೂ ಇತರ ಪ್ರಭಾವಿಗಳ ಪಾತ್ರವನ್ನು ಬಯಲಿಗೆಳೆಯಲು ಹೆಚ್ಚಿನ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.




