ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಕುಖ್ಯಾತ ಅಂತರರಾಜ್ಯ ವಂಚಕ, ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್‌ದಾರ ಸ್ಯಾಮ್ ಪೀಟರ್‌ನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಜಾಮೀನು ಪಡೆದು ಕಳೆದ 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ 64 ವರ್ಷದ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಎಂಬಾತನನ್ನು ಕೇರಳದ ಕಣ್ಣೂರಿನಲ್ಲಿ ಪತ್ತೆ ಹಚ್ಚಿ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಸ್ಯಾಮ್ ಪೀಟರ್ ತನ್ನದೇ ಆದ ಗ್ಯಾಂಗ್ ರಚಿಸಿಕೊಂಡು, ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದಗಳು, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ತಾನು ಪ್ರಭಾವಿ ಅಧಿಕಾರಿಯೆಂದು ನಂಬಿಸಿ ಹಣ ಪಡೆದು ಸುಲಿಗೆ ನಡೆಸುತ್ತಿದ್ದ. ಈ ಸಂಬಂಧ 2019ರ ಆಗಸ್ಟ್ 16 ರಂದು ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿದ್ದ ಕದ್ರಿ ಪೊಲೀಸರು, ಸ್ಯಾಮ್ ಪೀಟರ್ ಸೇರಿದಂತೆ ಆತನ ಗ್ಯಾಂಗ್‌ನ 8 ಸದಸ್ಯರನ್ನು ಬಂಧಿಸಿದ್ದರು. ತದನಂತರ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ ಈತ, ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಮೂರು ವರ್ಷಗಳಿಂದ ವಿವಿಧ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ.
ತನಿಖೆಯ ವೇಳೆ ಆರೋಪಿಯ ನಿಜವಾದ ಗುರುತು ಮತ್ತು ಚಾಲಾಕಿತನ ಬಯಲಾಗಿದೆ. ಪೊಲೀಸರ ಕಣ್ಣಿಗೆ ಮಣ್ಣೆರಚಲು ಈತ ಸ್ಥಳದಿಂದ ಸ್ಥಳಕ್ಕೆ ಹೆಸರು ಬದಲಾಯಿಸಿ ವಾಸಿಸುತ್ತಿದ್ದ. ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಪ್ರಸ್ತುತ ಡ್ಯಾನಿ ತಾರಕನ್ ಸೇರಿದಂತೆ ಸುಮಾರು 11ಕ್ಕೂ ಹೆಚ್ಚು ನಕಲಿ ಹೆಸರುಗಳನ್ನು ಈತ ಬಳಸಿಕೊಂಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಒಂದು ಸ್ಥಳದಲ್ಲಿ ಅಪರಾಧ ಎಸಗಿ, ಮತ್ತೊಂದು ಸ್ಥಳಕ್ಕೆ ತೆರಳಿ ಹೊಸ ಹೆಸರಿನೊಂದಿಗೆ ವಾಸಿಸುವುದು ಈತನ ಪ್ರವೃತ್ತಿಯಾಗಿತ್ತು.
ಈತ ಸಾಮಾನ್ಯ ವಂಚಕನಲ್ಲ, ಬದಲಾಗಿ ‘ರಾಹುಲ್ ಪೀಟರ್’ ಎಂಬ ಹೆಸರಿನಲ್ಲಿ 2001ರಿಂದಲೇ ಈತನ ವಿರುದ್ಧ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಲ್ಲಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ, ಉಳ್ಳಾಲ, ಕೊಣಾಜೆ, ಚಿಕ್ಕಬಳ್ಳಾಪುರ, ಬೆಂಗಳೂರು, ಉಡುಪಿ ಹಾಗೂ ಕುಶಾಲನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮತ್ತು ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲೂ ಮೋಸ ಹಾಗೂ ವಂಚನೆ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿವೆ.
ಪ್ರಸ್ತುತ ಈತನ ವಿರುದ್ಧ ಮಂಗಳೂರು ಉಳ್ಳಾಲ ಪೊಲೀಸ್ ಠಾಣೆ ಪ್ರಕರಣದಲ್ಲಿ 17 ಬಾರಿ ಹಾಗೂ ಮಂಗಳೂರು ಪೂರ್ವ ಠಾಣೆ ಪ್ರಕರಣದಲ್ಲಿ 14 ಬಾರಿ ವಾರೆಂಟ್ ಹೊರಡಿಸಲಾಗಿದ್ದು, ಬಳಿಕ ಉದ್ಘೋಷಿತ ಆರೋಪಿ ಎಂದು ಪ್ರಕಟಿಸಲಾಗಿತ್ತು. ಸದ್ಯ ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.




