ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಕೆಎಂಸಿ ಆಸ್ಪತ್ರೆ ಸಮೀಪದ ಪಾರ್ಕ್ ಅಪಾರ್ಟ್ ಮೆಂಟ್ ನಿವಾಸಿ ಹಸನ್ ಶಬೀರ್ (41) ಬಂಧಿತ ಆರೋಪಿ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಉಳಿದಿತ್ತು. ಪ್ರಕರಣದ ಆರೋಪಿ ಹಸನ್ ಶಬೀರ್ ಸುದೀರ್ಘ ಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಹಾಜರಾತಿಗಾಗಿ ನ್ಯಾಯಾಲಯವು ಸುಮಾರು 37 ಬಾರಿ ವಾರಂಟ್ ಹೊರಡಿಸಿದ್ದರೂ ಆತ ಹಾಜರಾಗಿರಲಿಲ್ಲ. ಇದೀಗ ಪುತ್ತೂರಿನ ಇನ್‌ಲ್ಯಾಂಡ್ ಅಪಾರ್ಟ್ ಮೆಂಟ್‌ನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಅ.17ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಡಬ್ಲ್ಯುಪಿಎಸ್‌ಐ ಜ್ಯೋತಿ, ಪಿಎಸ್‌ಐ ಸುರೇಶ್ ಹಾಗೂ ಸಿಬ್ಬಂದಿಗಳಾದ ಶಶಿಧರ ಶೆಟ್ಟರ್ ಮತ್ತು ಶಶಿಧರ್ ದೊಡ್ಡಮನಿ ಅವರು ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.




