ಮಣಿಪಾಲ: ಅನೈತಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಮಾನವ ಕಳ್ಳಸಾಗಣೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯಿಂದ ತಪ್ಪಿಸಿಕೊಂಡು ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಜಲ್ (40) ಮತ್ತು ಸಂಜಯ್ ಶಾ (49) ಎಂದು ಗುರುತಿಸಲಾಗಿದೆ.
ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದ ಸಂದರ್ಭದಲ್ಲಿ ಆರೋಪಿಗಳು ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ, ಠಾಣೆಯ ಪಿಎಸ್ಐ ತಿಮ್ಮೇಶ್ ಬಿ.ಎನ್. ಅವರನ್ನು ಸಹಾಯಕ ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಪೊಲೀಸ್ ಸಿಬ್ಬಂದಿಗಳಾದ ಸುರೇಶ್ ಶೆಟ್ಟಿ, ಚೇತನ್, ರವಿರಾಜ್ ಹಾಗೂ ಮಹಿಳಾ ಸಿಬ್ಬಂದಿಗಳಾದ ಜ್ಯೋತಿ ನಾಯಕ್ ಮತ್ತು ಸುಮಲತಾ ಅವರನ್ನು ಒಳಗೊಂಡ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಗಾಗಿ ಪಶ್ಚಿಮ ಬಂಗಾಳಕ್ಕೆ ತೆರಳಿತ್ತು. ಮ್ಯಾಪ್ಸ್ನೋಡಿ
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವಿಶೇಷ ತಂಡವು ನವೆಂಬರ್ 3ರಂದು ಬೆಳಿಗ್ಗೆ 11 ಗಂಟೆಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ನೇತಾಜಿ ನಗರದಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಬಂಧಿಸಿದೆ.
ಬಂಧಿತ ಆರೋಪಿಗಳನ್ನು ಕಾನೂನು ಪ್ರಕ್ರಿಯೆಯಂತೆ ಪಶ್ಚಿಮ ಬಂಗಾಳದ ಎಲ್.ಡಿ. ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ನವೆಂಬರ್ 7ರಂದು ಉಡುಪಿಯ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ನವೆಂಬರ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆದ ಒಂದು ವರ್ಷದಿಂದ ಪೊಲೀಸರ ಕೈಗೆ ಸಿಗದೆ ಪಶ್ಚಿಮ ಬಂಗಾಳದಲ್ಲಿ ನೆಲೆಸಿದ್ದ ಆರೋಪಿಗಳನ್ನು ವಿಶೇಷ ಕಾರ್ಯಾಚರಣೆ ಮೂಲಕ ಬಂಧಿಸಿರುವುದು ಮಣಿಪಾಲ ಪೊಲೀಸರ ತನಿಖಾ ಕಾರ್ಯಾಚರಣೆಯ ಪ್ರಮುಖ ಯಶಸ್ಸಾಗಿದೆ.


