ವಿಟ್ಲ: ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನ.19ರಂದು ಬಂಟ್ವಾಳದ ಬೊಳಂತೂರು ಕೊಕ್ಕಪುನಿ ಎಂಬಲ್ಲಿ ನಡೆದಿದೆ.
ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಜಯರಾಮ ಕೆ. ಅವರು ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದ್ದಾರೆ.
ಈ ವೇಳೆ ಯಾವುದೇ ಪರವಾನಿಗೆ ಅಥವಾ ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಿಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್ಎಸ್, ಗಣಿ ಮತ್ತು ಖನಿಜಗಳ ಕಾಯ್ದೆ ಹಾಗೂ ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಗಳಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.




