ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕುಸಿತವಾಗುತ್ತಿದೆ ಎಂದು ಕೇಂದ್ರ ಸರ್ಕಾರ ನಡೆಸಿದ ಸ್ಯಾಂಪಲ್ ರಿಜಿಸ್ಟ್ರೇಷನ್ ಸಿಸ್ಟಂ (SRS)-2022 ರ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಸ್ಯಾಂಪಲ್ ರಿಜಿಸ್ಟ್ರೇಷನ್ ಸಿಸ್ಟಂ-2022 ರ ವರದಿಯಲ್ಲಿ ಪ್ರಸ್ತುತ ರಾಜ್ಯದಲ್ಲಿ 1 ಸಾವಿರ ಗಂಡು ಮಕ್ಕಳಿಗೆ ಕೇವಲ 916 ಹೆಣ್ಣು ಮಕ್ಕಳಿದ್ದಾರೆ. ಗ್ರಾಮೀಣ ಭಾಗದಲ್ಲಿ 1 ಸಾವಿರ ಗಂಡು ಮಕ್ಕಳಿಗೆ 942 ಹೆಣ್ಣು ಮಕ್ಕಳಿದ್ದರೆ, ನಗರ ಪ್ರದೇಶದಲ್ಲಿ 1 ಸಾವಿರ ಗಂಡು ಮಕ್ಕಳಿಗೆ 871 ಹೆಣ್ಣು ಮಕ್ಕಳಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ಕಾನೂನು ಜಾರಿಗೊಳಿಸಿದೆ. ಈ ನಡುವೆ ಆರೋಗ್ಯ ಇಲಾಖೆಯೂ ಸಭೆ ನಡೆಸಿ, ಭ್ರೂಣ ಪರೀಕ್ಷೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ಕಾಯಿದೆಯಡಿ ಅಕ್ರಮವಾಗಿ ಭ್ರೂಣ ಪತ್ತೆ ಮಾಡುವ ಸ್ಕ್ಯಾನ್ ಸೆಂಟರ್ ಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
ಇನ್ನು ರಾಜ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ದಂಧೆಯಲ್ಲಿರುವ ವೈದ್ಯರು, ಸ್ಕ್ಯಾನಿಂಗ್ ಸೆಂಟರ್ ದಲ್ಲಾಳಿಗಳ ಮಾಹಿತಿ ನೀಡಿದಿವರಿಗೆ 50 ಸಾವಿರ ರೂ. ಬಹುಮಾನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.