ಗಡ್‌ಚಿರೋಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ದಳದ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಕೆದ್ಮಾರಾ ಅರಣ್ಯದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಗಡ್‌ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನೀಲೋತ್‌ಪಾಲ್, “ಮನೆ ರಾಜಾರಾಂ ಮತ್ತು ಪೆರಿಮಿಲಿ ಸಶಸ್ತ್ರ ಚೌಕಟ್ಟಿನ ನಡುವಿನ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಪೆರಿಮಿಲಿ ಮತ್ತು ಅಹೇರಿ ದಳದ ಸದಸ್ಯರು ಮೊಕ್ಕಾಂ ಹೂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಜಂಗಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಸಿ-60 ಪೋಲೀಸರ ತುಕಡಿಗಳನ್ನು ಕಳುಹಿಸಲಾಗಿದೆ. ಶೋಧ ಕಾರ್ಯಾಚರಣೆಯ ವೇಳೆ ಮಾವೋವಾದಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದರು. ನಂತರ ಪೊಲೀಸರು ಪ್ರತಿದಾಳಿ ನಡೆಸಿದರು. ಗುಂಡಿನ ಚಕಮಕಿ ನಂತ್ರ ಮೂವರು ಪುರುಷ ಮಾವೋವಾದಿಗಳ ಶವಗಳನ್ನು ಶಸ್ತ್ರಾಸ್ತ್ರಗಳು ಮತ್ತು ಇತರ ಸಾಮಗ್ರಿಗಳೊಂದಿಗೆ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.