ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು.
ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.
ಜನ ಬದಲಾವಣೆ ಬಯಸಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ, ಅವರ ಮೇಲೆ ಯಾರದೂ ಮುಲಾಜಿಲ್ಲದೇ ನಿರ್ಧಾಕ್ಷೀಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ರಕ್ಷಣಾಧಿಕಾರಿಯವರು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಆದರೆ ಯಾವುದೇ ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ದೂರುಗಳಿಗೆ ಪ್ರತಿಕ್ರಿಯಿಸಿ; ಪತ್ರಿಕೆಗಳು, ಟಿ.ವಿ.ಗಳಲ್ಲಿ ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ಅನೇಕ ಅಧಿಕಾರಿಗಳು ಕ್ಷೇತ್ರಗಳಿಗೆ ಹೋಗದೆ ಹವಾನಿಯಂತ್ರಿತ ಕೊಠಡಿಗಳಲ್ಲಿ ಕೂತು ಹೋಗುತ್ತಾರೆ. ಸರ್ಕಾರ ವಾಹನ ಸೇರಿದಂತೆ ಎಲ್ಲಾ ಸೌಲಭ್ಯ ನೀಡಿದ್ದು ಐಷರಾಮಿ ಜೀವನ ಮಾಡಲಿ ಎಂದಲ್ಲ, ಜನರ ಕೆಲಸ ಮಾಡಲಿ ಎಂದು, ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ಜನರ ಕೆಲಸ ಮಾಡಬೇಕೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು.