ಬೆಂಗಳೂರು: ಸಿಎಂ ಸಿದ್ಧರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು, ಅವರಿಗೆ ಬಿಗ್ ರಿಲೀಫ್ ನೀಡಿದೆ.
ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು, ಪೊಲೀಸರ ತನಿಖೆಗೆ ತಡೆ ನೀಡಿದೆ.
ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿಸಿದ್ದಾರೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಮೂರು ದೂರು ದಾಖಲಾಗಿದ್ದವು.
ಈ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜಾ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿ, ಪೊಲೀಸರು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ದಾಖಲಿಸಿರುವುದು ಸೂಕ್ತವಲ್ಲ. ಅವರ ಹೇಳಿಕೆಯ ನಂತ್ರ ಯಾವುದೇ ಹಿಂಸಾಚಾರ ಘಟನೆಗಳು ವರದಿಯಾಗಿಲ್ಲ ಎಂಬುದಾಗಿ ಹೈಕೋರ್ಟ್ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಶಾಸಕ ಹರೀಶ್ ಪೂಂಜಾ ಪರ ವಕೀಲರ ವಾದ ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು, ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವಂತ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. ಈ ಮೂಲಕ ಅವರಿಗೆ ಬಿಗ್ ರಿಲೀಫ್ ನೀಡಿದೆ.