ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಆರೋಪಿಗಳು ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ.ಈ ವೇಳೆ ಕಾರಿನಲ್ಲಿದ್ದ ಮಹಿಳೆಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದವರನ್ನು ವಿಭಿನ್ನ ಕೋಮಿನವರು ಎಂದು ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಚಿತ್ ಸಫಲಿಗ ಆರೋಪಿಗಳು. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.