ಬೆಂಗಳೂರು: 7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆಯ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಅನಧಿಕೃತವಾಗಿ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆದೇಶದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳ ವಿಶೇಷಾಧಿಕಾರಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ, ಮುಂಚಿತವಾಗಿಯೇ, ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವಂತೆ ಸೂಚಿಸಲಾಗಿದೆ.
ಇನ್ನೂ ಒಂದು ವೇಳೆ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ, ಶಿಸ್ತು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿದೆ.
ನಿನ್ನ ತಡರಾತ್ರಿಯವರೆಗೆ ಸಿಎಂ ಬೊಮ್ಮಾಯಿ ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಬೇಡಿಕೆ ಈಡೇರಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಎಂ ಬೊಮ್ಮಾಯಿಯವರು ಶೇ.7 ರಿಂದ 8ರಷ್ಟು ಮಧ್ಯಂತರ ವೇತನ ಜಾರಿಗೊಳಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದ್ರೇ ಇದಕ್ಕೆ ನೌಕರರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಎಚ್ಚರಿಕೆಯ ನಡುವೆ ಆಗಲಿದೆ ಎಂದು ಹೇಳಲಾಗುತ್ತಿದೆ.