ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಜ್ಪೆ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಾಕಿ ಉಳಿದಿದ್ದ ₹5,000 ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಹಿನ್ನೆಲೆ ಹಾಗೂ ಲಂಚದ ಬೇಡಿಕೆ
ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಿನಲ್ಲಿಡಲಾಗಿದ್ದ ಹಣವನ್ನು ವಾಪಸ್ ನೀಡಲು ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಈಗಾಗಲೇ ₹15,000 ಹಣವನ್ನು ಅವರು ಸ್ವೀಕರಿಸಿದ್ದರು. ಭಾನುವಾರ ಬಾಕಿ ಮೊತ್ತದ ಪೈಕಿ ₹5,000 ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ನಿಖರ ಮಾಹಿತಿ ಆಧರಿಸಿ ದಾಳಿ ನಡೆಸಿದ ಲೋಕಾಯುಕ್ತ ತಂಡ, ಲಂಚದ ಹಣದೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದೆ.
ಹಿಂದೆಯೂ ಕೇಳಿಬಂದಿತ್ತು ಎತ್ತಂಗಡಿ ದೂರು
ಬಂಧಿತ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರಿಗೆ ಲಂಚಾವತಾರ ಹೊಸದೇನಲ್ಲ ಎಂಬ ಆರೋಪಗಳಿವೆ. ಈ ಹಿಂದೆ ಮೈಸೂರಿನ ವಿಜಯನಗರ, ಹಾಸನ ಹಾಗೂ ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲೂ ಇಂತಹದ್ದೇ ಭ್ರಷ್ಟಾಚಾರದ ದೂರುಗಳು ಇವರ ಮೇಲೆ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಿಂದ ಬೇರೆಡೆಗೆ ಎತ್ತಂಗಡಿ ಮಾಡಲಾಗಿತ್ತು ಎಂದು ತಿಳಿದುಬಂದಿದೆ.




