ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ವಿರುದ್ದ ದಾಖಲಾದ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಿದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.
ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗಿದ್ದು, ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ ಒಂದು ವರ್ಷ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ತಿಳಿಸಿದೆ. ಕರ್ನಾಟಕ ಲೋಕಾಯುಕ್ತ ಮಂಗಳೂರು ಇದರ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತ ಮಂಗಳೂರು ಇದರ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಪ್ಪಾಡಿ ಸರ್ಕಾರದ ಪರವಾಗಿ ವಾದಿಸಿದ್ದರು.