ಮಂಗಳೂರು: ಡಿಸಿ ಮನ್ನ ಭೂಮಿಯನ್ನು ಅತಿಕ್ರಮಣ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಅದನ್ನು ತಕ್ಷಣ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಸಿ ಮನ್ನ ಭೂಮಿ ಅತಿಕ್ರಮಣ ಮಾಡಿ ಅಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಅದನ್ನು ಸ್ಥಗಿತಗೊಳಿಸಬೇಕು. 192(ಎ) ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಹಿತಾಸಕ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ವಿಚಾರಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲಾಗುತ್ತಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಸಂಬಂಧಿಸಿದವರು ಸಲ್ಲಿಸುವ ಮನವಿಯನ್ನು ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಸರ್ಕಾರದ ವಿವಿಧ ಕಚೇರಿಗಳಲ್ಲಿ ಬಾಹ್ಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು.