ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಮಹಿಳೆಯರು, ಯುವತಿಯರ ಅಸಹಜ ಹಾಗೂ ಅನುಮಾನಸ್ಪದ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡವು ಸಮಗ್ರ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.
ಧರ್ಮಸ್ಥಳದಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಮಹಿಳಾ ದೌರ್ಜನ್ಯ, ಹತ್ಯೆ, ಅತ್ಯಾಚಾರ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆಗೆ ಆಯೋಗದಿಂದ ಪತ್ರ ಬರೆದ ಬಳಿಕ ಎಸ್‌ಐಟಿ ರಚನೆಯಾಗಿದೆ. ಆದರೆ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ಕಂಡುಬರುತ್ತಿಲ್ಲ ಎಂದು ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣಗಳಲ್ಲಿ ಸಮಗ್ರ ತನಿಖೆ ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.



