ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ರೀತಿಯ ಡ್ರೋನ್‌ಗಳ ಬಳಕೆ, ಹಾರಾಟ ಮತ್ತು ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವು ಇಂದು (ಮೇ 10, 2025) ಸಂಜೆ 4 ಗಂಟೆಯಿಂದ ಮೇ 14, 2025 ರ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಶ್ರೀ ಅನುಪಮ್ ಅಗ್ರವಾಲ್ ಅವರು ತಿಳಿಸಿದ್ದಾರೆ.
ಪ್ರಸಕ್ತ ವಿದ್ಯಮಾನಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಡ್ರೋನ್ ರೂಲ್ಸ್ 2021 ರ ರೂಲ್ಸ್ 24 ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಈ ಕುರಿತು ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ), ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಎಲ್ಲಾ ಪೊಲೀಸ್ ನಿರೀಕ್ಷಕರುಗಳಿಗೆ ರವಾನಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆಕಾಶವಾಣಿ ಮಂಗಳೂರು ಇವರು ಈ ಆದೇಶವನ್ನು ಸಾರ್ವಜನಿಕರಿಗೆ ತಲುಪಿಸುವಂತೆ ಕೋರಲಾಗಿದೆ.