ಉಡುಪಿ: ಖಾಸಗಿ ಬಸ್ಸೊಂದರ ಹಿಂಬದಿಯ ಏಣಿಗೆ ನೇತಾಡಿಕೊಂಡು ವಿದ್ಯಾರ್ಥಿಗಳು ಅಪಾಯಕಾರಿ ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ.
ಉಡುಪಿ ಜಿಲ್ಲೆಯ ಹರಿಕಂಡಿಗೆ-ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಸೊಂದರ ಏಣಿಯಲ್ಲಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ಸಿನಲ್ಲಿ ವಿಪರೀತ ಜನಸಂದಣಿ ಇದ್ದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ವಿದ್ಯಾರ್ಥಿಗಳು ಪ್ರಾಣದ ಹಂಗು ತೊರೆದು ಬಸ್ಸಿನ ಹಿಂಬದಿಯ ಏಣಿಯನ್ನು ಹಿಡಿದು ನೇತಾಡುತ್ತಾ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿದೆ. ಈ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆಯು ತಕ್ಷಣವೇ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




