ಮಂಗಳೂರು: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿತನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತನನ್ನು ಉಳ್ಳಾಲದ ಬಸ್ತಿ ಪಡ್ಪು ನಿವಾಸಿ ಜಿಮ್ಮಿ ಅಲಿಯಾಸ್ ಜಿಂಕೆ ಜಿಮ್ಮಿ ಅಲಿಯಾಸ್ ಪೈಜಲ್ ಅಲಿಯಾಸ್ ಮಹಮ್ಮದ್ ಪೈಜಲ್ ಎಂದು ಗುರುತಿಸಲಾಗಿದೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 235/2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಕಲಂ 457, 380 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಮಂಗಳೂರು ನ್ಯಾಯಾಲಯದ ಸಿ.ಸಿ. ನಂ. 191/2021ರಲ್ಲಿ ನಡೆಯುತ್ತಿತ್ತು. ಆದರೆ ಆರೋಪಿತನು ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ 2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್ಪಿಸಿ (LPC) ಪ್ರಕರಣವೆಂದು ಪರಿಗಣಿಸಿತ್ತು.ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ನವೆಂಬರ್ 24ರಂದು ಆರೋಪಿತನನ್ನು ಪತ್ತೆಹಚ್ಚಿ ಬಂಧಿಸಿ, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.




