ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮಂಗಳವಾರ (ಜ.14ರಂದು) ಮುಂಜಾನೆ 6 ಗಂಟೆಯ ಸುಮಾರಿಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಡೆದಿದೆ.
ಶಾಸಕಾಂಗ ಪಕ್ಷದ ಸಭೆ ಮುಗಿಸಿ ನಿನ್ನೆ(ಸೋಮವಾರ) ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.
ಪರಿಣಾಮ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು. ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.