ಮಂಗಳೂರು: ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಒಬ್ಬ ವ್ಯಕ್ತಿಯ ಅಪರಾಧಕ್ಕೆ ಇಡೀ ಸಮುದಾಯವನ್ನು ಸಂಶಯಿಸುವ, ಅನುಮಾನದಿಂದ ನೋಡುವ ಪ್ರಕ್ರಿಯೆ ನಡೆಯುತ್ತಿರುವುದು ಖಂಡನೀಯ. ಜನತೆ ಇಂತಹ ಊಹಾಪೋಹ, ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಸೌಹಾರ್ದತೆ ಕಾಪಾಡಬೇಕು ಎಂದು ಕರೆ ನೀಡಿದರು.