ಮಂಗಳೂರು: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕ್ರೈಸ್ತ ಧರ್ಮಗುರು ಫಾ. ಸಿಪ್ರಿಯನ್ ಪಿಂಟೊ (65) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಉಳ್ಳಾಲ ತಾಲ್ಲೂಕಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್ಗೆ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ 2026ರ ಮೇ 13ರಂದು ಆರೋಪಿ ಫಾ. ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಸಂತ್ರಸ್ತ ಬಾಲಕ ದೂರು ನೀಡಿದ್ದಾನೆ.
ದೂರಿನ ಆಧಾರದ ಮೇಲೆ ಮಹಿಳಾ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 75 (2) (ಲೈಂಗಿಕ ಕಿರುಕುಳ) ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 8 ಮತ್ತು ಸೆಕ್ಷನ್ 12ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯ್ಕ್ ಅವರಿಗೆ ವಹಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆರೋಪಿ ಸಿಪ್ರಿಯನ್ ಪಿಂಟೊ ನಗರದ ವಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರುವಾಗಿದ್ದಾಗ 14 ವರ್ಷದ ಮತ್ತೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಹಾಗೂ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಬಂಧನಕ್ಕೊಳಗಾಗಿದ್ದ ಸಿಪ್ರಿಯನ್ ಪಿಂಟೊ, ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಅವರ ವಿರುದ್ಧ ಮತ್ತೊಂದು ಪೊಕ್ಸೊ ಪ್ರಕರಣ ದಾಖಲಾಗಿದೆ.

