ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಂಧಿಸಲಾದ ಮೂರು ಮಂದಿ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ.
ಇಂದು ಬಂಧಿಸಲಾದ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಪುತ್ತೂರು ಡಿವೈಎಸ್‌ಪಿ ಗಾನಾ ಪಿ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.