ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ಜಿಪಂ ಸಿಇಒ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಶ್ರೀಧರ್ ರ ಚಿಕಿತ್ಸೆಗೆ ನೆರವಾಗಿದ್ದಾರೆ. ಜಿಪಂ ಸಿಇಒ ಡಾ.ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಅವರು ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆಯವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು