ಮಂಗಳೂರು : 2024 ರಲ್ಲಿ ಹಾನಿಗೊಳಗಾದ ಮೊಬೈಲ್ ಫೋನ್ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತನನ್ನು ಕೊಲೆ ಮಾಡಿದ್ದಕ್ಕಾಗಿ 50 ವರ್ಷದ ವ್ಯಕ್ತಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಶಿಕ್ಷೆಗೊಳಗಾದವರನ್ನು ತೋಟದ ಬೆಂಗ್ರೆ ನಿವಾಸಿ ಧರ್ಮರಾಜ್ ಸುವರ್ಣ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಮೂಲದ 39 ವರ್ಷದ ಮುತ್ತು ಬಸವರಾಜ ವಡ್ಡರ ಅಲಿಯಾಸ್ ಮುದುಕಪ್ಪ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿ ಎಂದು ತೀರ್ಪು ನೀಡಿದೆ.
ನ್ಯಾಯಾಧೀಶ ಜಗದೀಶ್ ಅವರು ಸೋಮವಾರ, ಅಕ್ಟೋಬರ್ 12 ರಂದು ತೀರ್ಪು ಪ್ರಕಟಿಸಿದರು. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 103(1) ರ ಅಡಿಯಲ್ಲಿ ಸುವರ್ಣ ಅವರಿಗೆ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳು ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಾಸಿಕ್ಯೂಷನ್ ಪ್ರಕಾರ ಕೊಲೆಯ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲ್ ನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿ ಆರೋಪಿಯು ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪನನ್ನು ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿರುವುದಾಗಿದೆ.
ಹನುಮಂತ ದುರ್ಗಪ್ಪ ವಡ್ಡರ ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪರಾಧ ಎಸಗಿದ ನಂತರ ಸುವರ್ಣ ರಾಜ್ಯದಿಂದ ಪರಾರಿಯಾಗಿದ್ದಾನೆ. ಆದರೆ, ಪೊಲೀಸರು ಆತನನ್ನು ಪತ್ತೆಹಚ್ಚಿ ಸೆಪ್ಟೆಂಬರ್ 26, 2024 ರ ಮುಂಜಾನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಚೋಂಬಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.
ಪಣಂಬೂರು ಪೊಲೀಸ್ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ಅವರು ಆರಂಭಿಕ ತನಿಖೆ ನಡೆಸಿದರು. ನಂತರ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಜಾರಿಗೊಳಿಸಲಾಯಿತು, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ ಅವರು ತನಿಖೆಯನ್ನು ವಹಿಸಿಕೊಂಡು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದರು. ರಾಜ್ಯದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದರು




