ಉಡುಪಿ: ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಗೆ ಸಂಬಂಧಿಸಿದ ಪ್ರಕರಣಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಕಳೆದ ಒಂದು ತಿಂಗಳಿನಿಂದ ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಒಟ್ಟು 2,925 ಶಸ್ತ್ರಾಸ್ತ್ರಗಳನ್ನು ಪರಿಶೀಲಿಸಿದ್ದು, ನಾಲ್ಕು ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು ಮಾಡಿರುವುದು ಪತ್ತೆಯಾಗಿದೆ.
ಜಿಲ್ಲಾದ್ಯಂತ ಶಸ್ತ್ರಾಸ್ತ್ರ ಹೊಂದಿರುವವರ ಹಿನ್ನೆಲೆ, ಶಸ್ತ್ರಾಸ್ತ್ರಗಳ ಸ್ಥಿತಿ ಹಾಗೂ ಅವುಗಳಲ್ಲಿ ಯಾವುದೇ ಅನಧಿಕೃತ ಮಾರ್ಪಾಡು ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿತ್ತು.
ಪರಿಶೀಲಿಸಿದ ಶಸ್ತ್ರಾಸ್ತ್ರಗಳಲ್ಲಿ 1,759 ಎಸ್ಬಿಎಂಎಲ್, 554 ಎಸ್ಬಿಬಿಎಲ್, 318 ಡಿಬಿಬಿಎಲ್, 6 ಡಿಬಿಎಂಎಲ್, 120 ಪಿಸ್ತೂಲ್, 119 ರಿವಾಲ್ವರ್, 30 ರೈಫಲ್, 13 ಬೋರ್ ಗನ್ ಹಾಗೂ 6 ಎನ್ಪಿ ಬೋರ್ ಶಸ್ತ್ರಾಸ್ತ್ರಗಳು ಸೇರಿವೆ.
ಶಂಕರನಾರಾಯಣ, ಕೋಟ, ಬ್ರಹ್ಮಾವರ ಹಾಗೂ ಕಾರ್ಕಳ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಒಟ್ಟು ನಾಲ್ಕು ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು ಪತ್ತೆಯಾಗಿದ್ದು, ಈ ಸಂಬಂಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. Indian Arms Act-1959ರ ಕಲಂ 25ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಇದೇ ವೇಳೆ, ರೌಡಿ ಹಾಳೆ ಹೊಂದಿರುವ ಹಾಗೂ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವ ವ್ಯಕ್ತಿಗಳ ಪ್ರಸ್ತುತ ನಡವಳಿಕೆ ಮತ್ತು ಶಸ್ತ್ರಾಸ್ತ್ರ ಹೊಂದಿದ ಬಳಿಕ ಅವರು ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಅಕ್ರಮ ಶಸ್ತ್ರಾಸ್ತ್ರ ಬಳಕೆ ಮತ್ತು ಅನಧಿಕೃತ ಮಾರ್ಪಾಡುಗಳ ವಿರುದ್ಧ ನಿರಂತರ ನಿಗಾ ವಹಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಅನಧಿಕೃತ ಶಸ್ತ್ರಾಸ್ತ್ರ ಬಳಕೆ, ಮಾರ್ಪಾಡು ಅಥವಾ ಸಂಗ್ರಹದ ಬಗ್ಗೆ ಮಾಹಿತಿ ದೊರೆತರೆ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಅಥವಾ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 0820-2526444, 0820-2526709 ಹಾಗೂ ವಾಟ್ಸಾಪ್ ಸಂಖ್ಯೆ 9480805400ಕ್ಕೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.




